ರಸ್ತೆಯುದ್ದಕ್ಕೂ ಮಳೆ ನೀರು ಮೊಣಕಾಲುದ್ದ ನಿಂತಿರುವುದರಿಂದ ದ್ವಿಚಕ್ರ ವಾಹನ ಸವಾರರು ಹಾಗೂ ಪಾದಚಾರಿಗಳು ಜೀವ ಕೈಯಲ್ಲಿ ಹಿಡಿದು ಸಂಚರಿಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಸಮರ್ಪಕವಾದ ಚರಂಡಿ ವ್ಯವಸ್ಥೆ ಇಲ್ಲದಿರುವುದೇ ಈ ಸಮಸ್ಯೆಗೆ ಮುಖ್ಯ ಕಾರಣವಾಗಿದ್ದು, ರಸ್ತೆಯಲ್ಲೇ ಮಳೆ ನೀರು ಹಳ್ಳದಂತೆ ಶೇಖರಣೆಯಾಗುತ್ತಿದೆ. ಇದರಿಂದಾಗಿ ಈ ಭಾಗದಲ್ಲಿ ಸಾರ್ವಜನಿಕ ಸಂಚಾರಕ್ಕೆ ತೀವ್ರ ಅಡಚಣೆ ಉಂಟಾಗಿದೆ.
ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಾರ್ವಜನಿಕರ ಆಕ್ರೋಶ
"ಪ್ರತಿ ವರ್ಷ ಮಳೆಗಾಲ ಬಂದಾಗಲೂ ಕಕ್ಕಿಂಜೆ-ನೆರಿಯ ರಸ್ತೆಯ ಪರಿಸ್ಥಿತಿ ಇದೇ ಆಗಿರುತ್ತದೆ. ಈ ಬಗ್ಗೆ ಸ್ಥಳೀಯ ಆಡಳಿತ ಹಾಗೂ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ಹಲವು ಬಾರಿ ತಂದಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಅಧಿಕಾರಿಗಳ ಈ ನಿರ್ಲಕ್ಷ್ಯ ಧೋರಣೆಯಿಂದಾಗಿ ಸಾರ್ವಜನಿಕರು ನಿತ್ಯ ನರಕಯಾತನೆ ಅನುಭವಿಸುವಂತಾಗಿದೆ," ಎಂದು ಸ್ಥಳೀಯ ನಿವಾಸಿಗಳು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಇನ್ನಾದರೂ ಸಂಬಂಧಪಟ್ಟ ಇಲಾಖೆಯ ಮೇಲಧಿಕಾರಿಗಳು ಎಚ್ಚೆತ್ತುಕೊಂಡು, ಮಳೆ ನೀರು ಸರಾಗವಾಗಿ ಹರಿದು ಹೋಗಲು ಸೂಕ್ತ ಚರಂಡಿ ವ್ಯವಸ್ಥೆ ಕಲ್ಪಿಸಬೇಕು ಹಾಗೂ ಈ ಜ್ವಲಂತ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸಬೇಕು ಎಂದು ಸಾರ್ವಜನಿಕರು ಹಾಗೂ ವಾಹನ ಚಾಲಕರು ಒತ್ತಾಯಿಸಿದ್ದಾರೆ.
ವರದಿ - ರಶ್ಮಿತಾ ಶೆಟ್ಟಿ
