
ಧರ್ಮಸ್ಥಳ: ಇಲ್ಲಿನ ಕನ್ಯಾಡಿ ಮಸೀದಿ ಬಳಿ ಜೂ.30ರಂದು ರಾತ್ರಿ ಭೀಕರ ರಸ್ತೆ ಅಪಘಾತವೊಂದು ಸಂಭವಿಸಿದೆ. ಪಾದಚಾರಿಯೊಬ್ಬರಿಗೆ ಸಾರಿಗೆ ಸಂಸ್ಥೆಯ ಬಸ್ ಡಿಕ್ಕಿಯಾಗಿದ್ದು, ವ್ಯಕ್ತಿ ತೀವ್ರವಾಗಿ ಗಾಯಗೊಂಡಿದ್ದಾರೆ.
ಮೂಲಗಳ ಪ್ರಕಾರ, ಉಜಿರೆಯಿಂದ ಧರ್ಮಸ್ಥಳದ ಕಡೆಗೆ ಚಲಿಸುತ್ತಿದ್ದ ಸರಕಾರಿ ಬಸ್, ಕನ್ಯಾಡಿ ಮಸೀದಿ ಸಮೀಪ ಬರುತ್ತಿದ್ದಂತೆ ಪಾದಚಾರಿಗೆ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಪಾದಚಾರಿ ರಸ್ತೆಗೆ ಎಸೆಯಲ್ಪಟ್ಟಿದ್ದು, ತಲೆಯ ಭಾಗಕ್ಕೆ ಗಂಭೀರ ಸ್ವರೂಪದ ಗಾಯಗಳಾಗಿವೆ. ಅಪಘಾತದ ಸ್ಥಳದಲ್ಲಿ ಭಾರೀ ಪ್ರಮಾಣದಲ್ಲಿ ರಕ್ತಸ್ರಾವವಾಗಿದ್ದು, ಗಾಯಾಳುವಿನ ಸ್ಥಿತಿ ಚಿಂತಾಜನಕವಾಗಿದೆ ಎನ್ನಲಾಗಿದೆ. ತಕ್ಷಣವೇ ಸ್ಥಳೀಯರು ತೀವ್ರವಾಗಿ ಗಾಯಗೊಂಡಿದ್ದ ವ್ಯಕ್ತಿಯನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆಗೆ ವ್ಯವಸ್ಥೆ ಮಾಡಿದ್ದಾರೆ.
ಘಟನೆ ನಡೆಯುವ ಸಂದರ್ಭದಲ್ಲಿ ಧರ್ಮಸ್ಥಳ ಮತ್ತು ಸುತ್ತಮುತ್ತಲ ಪ್ರದೇಶದಲ್ಲಿ ಭಾರೀ ಮಳೆ ಸುರಿಯುತ್ತಿತ್ತು. ರಸ್ತೆಯುದ್ದಕ್ಕೂ ನೀರು ನಿಂತು ಸಂಪೂರ್ಣ ಒದ್ದೆಯಾಗಿತ್ತು. ಮಳೆಯಿಂದಾಗಿ ರಸ್ತೆ ಸರಿಯಾಗಿ ಕಾಣಿಸದೆ, ಚಾಲಕನ ನಿಯಂತ್ರಣ ತಪ್ಪಿ ಈ ಅಪಘಾತ ಸಂಭವಿಸಿರಬಹುದು ಎಂದು ಸ್ಥಳೀಯರು ಶಂಕಿಸಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.