ಬಂಟ್ವಾಳ: ಇಲ್ಲಿನ ಬಿ.ಸಿ. ರೋಡ್‌ನಲ್ಲಿ ಗುರುವಾರ ಸಂಜೆ ಸಾರ್ವಜನಿಕರನ್ನು ಬೆಚ್ಚಿಬೀಳಿಸುವಂತಹ ಘಟನೆಯೊಂದು ನಡೆದಿದ್ದು, ಬಸ್ ನಿಲ್ದಾಣದಲ್ಲಿ ಕಾಯುತ್ತಿದ್ದ ಯುವತಿಯೊಬ್ಬಳ ಮೇಲೆ ಅಪರಿಚಿತ ಪಾತಕಿಯೊಬ್ಬ ಮಾರಣಾಂತಿಕ ಹಲ್ಲೆ ನಡೆಸಿ ಪರಾರಿಯಾಗಿದ್ದಾನೆ.
ಹೊಸ KSRTC ಬಸ್ ನಿಲ್ದಾಣದ ಬಳಿ ಈ ಕೃತ್ಯ ನಡೆದಿದೆ. ಸುಮಾರು 21 ರಿಂದ 25 ವರ್ಷ ಪ್ರಾಯದ ಯುವತಿ ಬಸ್‌ಗಾಗಿ ಕಾಯುತ್ತಿದ್ದ ವೇಳೆ ಏಕಾಏಕಿ ನುಗ್ಗಿದ ದುಷ್ಕರ್ಮಿ, ಹರಿತವಾದ ಆಯುಧದಿಂದ ಆಕೆಯ ಮೇಲೆ ತೀವ್ರವಾಗಿ ಹಲ್ಲೆ ನಡೆಸಿದ್ದಾನೆ. ದಾಳಿಯ ತೀವ್ರತೆಗೆ ಯುವತಿ ರಕ್ತದ ಮಡುವಿನಲ್ಲಿ ಬಿದ್ದಿದ್ದು, ಆರೋಪಿ ಸ್ಥಳದಿಂದ ಕಾಲ್ಕಿತ್ತಿದ್ದಾನೆ.
ತಕ್ಷಣವೇ ಆಸ್ಪತ್ರೆಗೆ ದಾಖಲು
ರಕ್ತದ ಮಡುವಿನಲ್ಲಿ ಬಿದ್ದಿದ್ದ ಯುವತಿಯನ್ನು ತಕ್ಷಣವೇ ಸ್ಥಳೀಯರ ನೆರವಿನೊಂದಿಗೆ ಬಂಟ್ವಾಳದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ಚಿಕಿತ್ಸೆ ನೀಡಲಾಗುತ್ತಿದೆ.
ಪೊಲೀಸರಿಂದ ತನಿಖೆ ಚುರುಕು
ವಿಷಯ ತಿಳಿಯುತ್ತಿದ್ದಂತೆಯೇ ಬಂಟ್ವಾಳ ನಗರ ಪೊಲೀಸ್ ಠಾಣೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ತಕ್ಷಣವೇ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಘಟನೆಗೆ ನಿಖರವಾದ ಕಾರಣವೇನು? ಹಲ್ಲೆ ನಡೆಸಿದ ಆತ ಯಾರು? ಎಂಬುದು ತನಿಖೆಯಿಂದಷ್ಟೇ ಬೆಳಕಿಗೆ ಬರಬೇಕಿದೆ. ಪೊಲೀಸರು ಸದ್ಯ ಪ್ರಕರಣ ದಾಖಲಿಸಿಕೊಂಡಿದ್ದು, ತಲೆಮರೆಸಿಕೊಂಡಿರುವ ಆರೋಪಿಯ ಪತ್ತೆಗಾಗಿ ಜಾಲ ಬೀಸಿದ್ದಾರೆ.
