ಬೆಳ್ತಂಗಡಿ: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ವ್ಯಕ್ತಿಯೊಬ್ಬನನ್ನು ಬೆಳ್ತಂಗಡಿ ಠಾಣೆ ಪೊಲೀಸರು ಪೋಕ್ಸೋ (POCSO) ಕಾಯ್ದೆಯಡಿ ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಳಪಡಿಸಿದ್ದಾರೆ.
ಉಪ್ಪಿನಂಗಡಿ ನಿವಾಸಿ, 28 ವರ್ಷದ ಶುಭರಾಜ್ ಬಂಧಿತ ಆರೋಪಿ. ಮೂಲತಃ ವೇಣೂರಿನವನಾದ ಈತ ಖಾಸಗಿ ಬಸ್ಸೊಂದರಲ್ಲಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ.
ಪ್ರಕರಣದ ಹಿನ್ನೆಲೆ:
ಆರೋಪಿಯು ಬಾಲಕಿಯ ಹತ್ತಿರದ ಸಂಬಂಧಿಯಾಗಿದ್ದು, ಈತನ ಕೃತ್ಯದ ಕುರಿತು ಬಾಲಕಿಯ ತಾಯಿ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ದೂರಿನ ಆಧಾರದ ಮೇಲೆ ತಕ್ಷಣವೇ ಕಾರ್ಯಪ್ರವೃತ್ತರಾದ ಪೊಲೀಸರು, ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.
ಪೊಲೀಸರು ಸಂತ್ರಸ್ತ ಬಾಲಕಿಯನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಿದ್ದು, ಬಂಧಿತ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದ್ದು, ಆತನನ್ನು ಮಂಗಳೂರು ಕೇಂದ್ರ ಕಾರಾಗೃಹಕ್ಕೆ ರವಾನಿಸಲಾಗಿದೆ. ಬೆಳ್ತಂಗಡಿ ಪೊಲೀಸರು ಪ್ರಕರಣದ ಮುಂದಿನ ತನಿಖೆ ನಡೆಸುತ್ತಿದ್ದಾರೆ.
