ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯನ್ನು ಬೆಚ್ಚಿಬೀಳಿಸಿದ್ದ ಬಿ.ಸಿ.ರೋಡ್ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಲಾವಣ್ಯ ಭೀಕರ ಹತ್ಯೆ ಪ್ರಕರಣದ ಮುಖ್ಯ ಆರೋಪಿ ಚೇತನ್‌ನನ್ನು ಬಂಟ್ವಾಳ ನಗರ ಠಾಣೆ ಪೊಲೀಸರು ಅಧಿಕೃತವಾಗಿ ತಮ್ಮ ವಶಕ್ಕೆ ಪಡೆದುಕೊಂಡಿದ್ದಾರೆ.
ಕಳೆದ ಜುಲೈ 16ರಂದು ಕಕ್ಯಪದವು ನಿವಾಸಿ ಲಾವಣ್ಯ ಎಂಬ ಯುವತಿಯನ್ನು ಬೆಳ್ತಂಗಡಿಯ ಓಡಿಲ್ನಾಳ ನಿವಾಸಿ ಚೇತನ್ ಸಾರ್ವಜನಿಕವಾಗಿಯೇ ಮಾರಕಾಸ್ತ್ರಗಳಿಂದ ಭೀಕರವಾಗಿ ಹತ್ಯೆ ಮಾಡಿದ್ದ. ಕೃತ್ಯ ಎಸಗಿದ ಬಳಿಕ ಕಾರಿನಲ್ಲಿ ಪರಾರಿಯಾಗಿದ್ದ ಈತನನ್ನು ಜುಲೈ 17ರಂದು ಮಂಗಳೂರಿನಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದರು.
11 ದಿನಗಳ ಐಸಿಯು ಚಿಕಿತ್ಸೆಯ ನಂತರ ವಶಕ್ಕೆ
ಹತ್ಯೆ ನಡೆಸಿದ ಬಳಿಕ ಆರೋಪಿ ಚೇತನ್ ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಎನ್ನಲಾಗಿದೆ. ಹೀಗಾಗಿ ಆತನನ್ನು ತಕ್ಷಣವೇ ಬಂಟ್ವಾಳ ಸರ್ಕಾರಿ ಆಸ್ಪತ್ರೆಗೆ, ತದನಂತರ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯ ತೀವ್ರ ನಿಗಾ ಘಟಕಕ್ಕೆ (ICU) ದಾಖಲಿಸಲಾಗಿತ್ತು. ಕಳೆದ 11 ದಿನಗಳಿಂದ ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಈತ, ಸಂಪೂರ್ಣ ಗುಣಮುಖನಾಗಿ ಸಾಮಾನ್ಯ ವಾರ್ಡ್‌ಗೆ ಸ್ಥಳಾಂತರಗೊಂಡಿದ್ದ. ವೈದ್ಯರ ಅನುಮತಿ ದೊರೆತ ಹಿನ್ನೆಲೆಯಲ್ಲಿ ಸೋಮವಾರ (ಜುಲೈ 27) ಪೊಲೀಸರು ಆತನನ್ನು ಬಂಧನಕ್ಕೆ ಒಳಪಡಿಸಿದ್ದಾರೆ.
ಇಂದು ನ್ಯಾಯಾಲಯಕ್ಕೆ ಹಾಜರು?
ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳ ಎಎಸ್‌ಪಿ ಯಶ್ ಕುಮಾರ್ ಶರ್ಮ ಅವರ ಸೂಕ್ತ ಮಾರ್ಗದರ್ಶನದಲ್ಲಿ, ಬಂಟ್ವಾಳ ನಗರ ಪೊಲೀಸ್ ಇನ್ಸ್‌ಪೆಕ್ಟರ್ ಆನಂತಪದ್ಮನಾಭ ಹಾಗೂ ಸಿಬ್ಬಂದಿ ತನಿಖೆಯನ್ನು ತೀವ್ರಗೊಳಿಸಿದ್ದಾರೆ. ವಶಕ್ಕೆ ಪಡೆಯಲಾಗಿರುವ ಆರೋಪಿ ಚೇತನ್‌ನನ್ನು ಮಂಗಳವಾರ ನ್ಯಾಯಾಲಯಕ್ಕೆ ಹಾಜರುಪಡಿಸುವ ಸಾಧ್ಯತೆಯಿದೆ.
