ದಕ್ಷಿಣ ಕನ್ನಡ

Kinnigoli: ಹಿರಿಯ ಪತ್ರಕರ್ತ ಚಿದಂಬರ ಬೈಕಂಪಾಡಿ ಅವರಿಗೆ ಪ್ರತಿಷ್ಠಿತ 'ಕೊ.ಅ. ಉಡುಪ' ಪ್ರಶಸ್ತಿ ಗೌರವ

ಕಿನ್ನಿಗೋಳಿ: 'ಯುಗಪುರುಷ'ದ ಸಂಸ್ಥಾಪಕರಾದ ಕೊಡೆತ್ತೂರು ಅನಂತಪದ್ಮನಾಭ ಉಡುಪ ಅವರ ಸ್ಮರಣಾರ್ಥ ಪ್ರತಿವರ್ಷ ನೀಡಲಾಗುವ ಪ್ರತಿಷ್ಠಿತ 'ಕೊ.ಅ. ಉಡುಪ' ಪ್ರಶಸ್ತಿಗೆ ಈ ಬಾರಿ ಹಿರಿಯ ಪತ್ರಕರ್ತ ಹಾಗೂ ಸಾಹಿತಿ ಚಿದಂಬರ ಬೈಕಂಪಾಡಿ ಅವರನ್ನು ಆಯ್ಕೆ ಮಾಡಲಾಗಿದೆ.

​ಜುಲೈ 24ರಂದು ಕಿನ್ನಿಗೋಳಿಯ ಯುಗಪುರುಷ ಸಭಾಭವನದಲ್ಲಿ ಆಯೋಜಿಸಲಾಗಿರುವ ವಿಶೇಷ ಸಮಾರಂಭದಲ್ಲಿ ಚಿದಂಬರ ಬೈಕಂಪಾಡಿ ಅವರಿಗೆ ಈ ಪ್ರಶಸ್ತಿಯನ್ನು ಪ್ರದಾನ ಮಾಡಿ ಗೌರವಿಸಲಾಗುವುದು ಎಂದು ಕೊಡೆತ್ತೂರು ಭುವನಾಭಿರಾಮ ಉಡುಪ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಈ ಪ್ರಶಸ್ತಿಯು 10 ಸಾವಿರ ರೂಪಾಯಿ ನಗದು ಪುರಸ್ಕಾರ, ಗೌರವ ಫಲಕ ಹಾಗೂ ಪ್ರಶಸ್ತಿ ಪತ್ರವನ್ನು ಒಳಗೊಂಡಿರುತ್ತದೆ.

ಸಾಧನೆಯ ಹಾದಿ:

​ಮಾಧ್ಯಮ ರಂಗದಲ್ಲಿ ದಶಕಗಳ ಕಾಲ ಸುದೀರ್ಘ ಸೇವೆ ಸಲ್ಲಿಸಿರುವ ಚಿದಂಬರ ಬೈಕಂಪಾಡಿ ಅವರು, ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿಯಾಗಿ ಜವಾಬ್ದಾರಿ ನಿಭಾಯಿಸಿದ್ದಾರೆ.

​ಪತ್ರಿಕೋದ್ಯಮದ ಜೊತೆಗೆ ಸಾರ್ವಜನಿಕ ರಂಗದಲ್ಲೂ ಗುರುತಿಸಿಕೊಂಡಿರುವ ಇವರು, ಮಂಗಳೂರು ವಿಶ್ವವಿದ್ಯಾಲಯದ ಸೆನೆಟ್ ಸದಸ್ಯರಾಗಿ, ಲೇಡಿಗೋಶನ್ ಆಸ್ಪತ್ರೆಯ ಸಲಹಾ ಸಮಿತಿ ಸದಸ್ಯರಾಗಿ ಮತ್ತು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಸದಸ್ಯರಾಗಿ ಮಹತ್ವದ ಕೊಡುಗೆ ನೀಡಿದ್ದಾರೆ. ಅಲ್ಲದೆ, ಮಂಗಳೂರು ವಿವಿಯ ಪತ್ರಿಕೋದ್ಯಮ ವಿಭಾಗದ ಸಂದರ್ಶಕ ಪ್ರಾಧ್ಯಾಪಕರಾಗಿಯೂ ಅವರು ಸೇವೆ ಸಲ್ಲಿಸಿದ್ದಾರೆ.

ಪ್ರಶಸ್ತಿ-ಪುರಸ್ಕಾರಗಳ ಗರಿ:

​ಅವರ ಸುದೀರ್ಘ ಸಾಧನೆಗೆ ಈಗಾಗಲೇ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ, ಅತ್ಯುತ್ತಮ ತನಿಖಾ ವರದಿಗಾರ ಪ್ರಶಸ್ತಿ, ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ, ಅಖಿಲ ಭಾರತ ಆಕಾಶವಾಣಿ ವಾರ್ಷಿಕ ಪ್ರಶಸ್ತಿ, ಬನ್ನಂಜೆ ರಾಮಾಚಾರ್ಯ ಪತ್ರಿಕೋದ್ಯಮ ಪ್ರಶಸ್ತಿ, ಕೋಟ ಶಿವರಾಮ ಕಾರಂತ ಪ್ರಶಸ್ತಿ, ಪಟ್ಲ ಫೌಂಡೇಶನ್ ಪ್ರಶಸ್ತಿ ಹಾಗೂ ನಿಟ್ಟೆ ಯುನಿವರ್ಸಿಟಿ ಮಾಧ್ಯಮ ಪ್ರಶಸ್ತಿ ಸೇರಿದಂತೆ ಹತ್ತು ಹಲವು ಗೌರವಗಳು ಲಭಿಸಿವೆ. ಇತ್ತೀಚೆಗೆ ನಡೆದ ದಕ್ಷಿಣ ಕನ್ನಡ ಜಿಲ್ಲಾ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆಯ ಗೌರವವೂ ಇವರಿಗೆ ಸಂದಿರುವುದು ವಿಶೇಷ.



image