ಚಿತ್ರದುರ್ಗ: ಬೆಂಗಳೂರಿನಿಂದ ಗೋವಾಗೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಇಬ್ಬರು ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದು, 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ದಾರುಣ ಘಟನೆ ಹಿರಿಯೂರು ತಾಲೂಕಿನ ಐಮಂಗಲ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುರುವಾರ ತಡರಾತ್ರಿ ಸಂಭವಿಸಿದೆ.
'ಐಲ್ಯಾಂಡ್' ಟ್ರಾವೆಲ್ಸ್‌ಗೆ ಸೇರಿದ ಈ ಖಾಸಗಿ ಬಸ್‌ನಲ್ಲಿ ಒಟ್ಟು 53 ಪ್ರಯಾಣಿಕರು ಪ್ರಯಾಣಿಸುತ್ತಿದ್ದರು. ಐಮಂಗಲ ಬಳಿ ಸಾಗುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿದ ಬಸ್, ರಸ್ತೆಯ ಎಡಭಾಗದಲ್ಲಿದ್ದ ಆಳವಾದ ಟ್ರೆಂಚ್‌ಗೆ ಉರುಳಿಬಿದ್ದಿದೆ. ಘಟನೆಯ ತೀವ್ರತೆಗೆ ಬಸ್‌ನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ.
ಅಪಘಾತದ ಮಾಹಿತಿ ತಿಳಿಯುತ್ತಿದ್ದಂತೆಯೇ ಐಮಂಗಲ ಪೊಲೀಸ್ ಠಾಣೆಯ ಸಿಬ್ಬಂದಿ ಹಾಗೂ ಅಗ್ನಿಶಾಮಕ ದಳದ ಯೋಧರು ತಕ್ಷಣವೇ ಸ್ಥಳಕ್ಕೆ ಧಾವಿಸಿ, ಕ್ರೇನ್ ನೆರವಿನಿಂದ ಬಸ್ ಅನ್ನು ಮೇಲೆತ್ತಿ ರಕ್ಷಣಾ ಕಾರ್ಯಾಚರಣೆ ನಡೆಸಿದರು. ಸದ್ಯ ಗಾಯಾಳುಗಳನ್ನು ಚಿತ್ರದುರ್ಗದ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ತುರ್ತು ಚಿಕಿತ್ಸೆ ನೀಡಲಾಗುತ್ತಿದೆ. ಈ ಕುರಿತು ಐಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
