ಧರ್ಮಸ್ಥಳ:
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್‌ನ ಆಶ್ರಯದಲ್ಲಿ ಆಯೋಜಿಸಲಾಗುತ್ತಿರುವ 28ನೇ ವರ್ಷದ ಭಜನಾ ಕಮ್ಮಟದ ಸಿದ್ಧತೆಯ ಭಾಗವಾಗಿ, ಧರ್ಮಸ್ಥಳದ ಅನ್ನಪೂರ್ಣ ಛತ್ರದ ಸಭಾಂಗಣದಲ್ಲಿ ರಾಜ್ಯ ಮಟ್ಟದ ಪೂರ್ವಭಾವಿ ಸಭೆ ಯಶಸ್ವಿಯಾಗಿ ನಡೆಯಿತು.
ಸುಳ್ಯ ವಲಯ ಪರಿಷತ್ ಅಧ್ಯಕ್ಷೆ ಶ್ರೀಮತಿ ಸವಿತಾ ಸಂದೇಶ್ ಅವರ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಶುಭಾರಂಭಗೊಂಡಿತು. ಸಭೆಯನ್ನುದ್ದೇಶಿಸಿ ಮಾತನಾಡಿದ ಭಜನಾ ಪರಿಷತ್ ರಾಜ್ಯ ಸಂಚಾಲಕ ಜಿ. ಸುಬ್ರಹ್ಮಣ್ಯ ಪ್ರಸಾದ್ ಅವರು, "ಬರುವ ಸೆಪ್ಟೆಂಬರ್ 28ರಿಂದ ಅಕ್ಟೋಬರ್ 4ರವರೆಗೆ ಧರ್ಮಸ್ಥಳದಲ್ಲಿ ಭಜನಾ ಕಮ್ಮಟ ನಡೆಯಲಿದೆ" ಎಂದು ಮಾಹಿತಿ ನೀಡಿದರು. ಜೊತೆಗೆ ಕಮ್ಮಟದ ಸಂಪೂರ್ಣ ನೀಲನಕ್ಷೆ ಹಾಗೂ ಯೋಜಿತ ಕಾರ್ಯಕ್ರಮಗಳ ಕುರಿತು ವಿವರಣೆ ನೀಡಿದ ಅವರು, ರಾಜ್ಯಾದ್ಯಂತ ಭಜನಾ ಪರಿಷತ್‌ನ ಪದಾಧಿಕಾರಿಗಳು ನಡೆಸುತ್ತಿರುವ ಶ್ಲಾಘನೀಯ ಕಾರ್ಯಗಳಿಗೆ ಅಭಿನಂದನೆ ಸಲ್ಲಿಸಿದರು.
ಪೂಜ್ಯ ಖಾವಂದರ ಆಪ್ತ ಕಾರ್ಯದರ್ಶಿ ಎ. ವೀರು ಶೆಟ್ಟಿ ಅವರು ಮಾತನಾಡಿ, ಭಜನಾ ಪರಿಷತ್‌ನ ಸಕ್ರಿಯ ಚಟುವಟಿಕೆಗಳು ಹಾಗೂ ಕಾರ್ಯಕರ್ತರ ಕೊಡುಗೆಯನ್ನು ಮುಕ್ತಕಂಠದಿಂದ ಶ್ಲಾಘಿಸಿ, ಕ್ಷೇತ್ರದ ಪರವಾಗಿ ಶುಭ ಹಾರೈಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಜನಾ ಪರಿಷತ್ ರಾಜ್ಯಾಧ್ಯಕ್ಷ ಪಿ. ಚಂದ್ರಶೇಖರ್ ಸಾಲ್ಯಾನ್ ಕೊಯ್ಯರು ವಹಿಸಿದ್ದರು. ಸಭೆಯಲ್ಲಿ ಭಾಗವಹಿಸಿದ್ದ ರಾಜ್ಯದ ವಿವಿಧ ತಾಲೂಕುಗಳ ಪದಾಧಿಕಾರಿಗಳು ತಮ್ಮ ಕ್ಷೇತ್ರಗಳ ಸಾಧನಾ ವರದಿಗಳನ್ನು ಮಂಡಿಸಿದರು. ಮುಂಬರುವ ಭಜನಾ ಕಮ್ಮಟವನ್ನು ಅತ್ಯಂತ ವಿಜೃಂಭಣೆಯಿಂದ ಹಾಗೂ ಯಶಸ್ವಿಯಾಗಿ ನಡೆಸುವುದು ಮತ್ತು ಪರಿಷತ್‌ನ ಭವಿಷ್ಯದ ಕಾರ್ಯಯೋಜನೆಗಳ ಕುರಿತು ಸುದೀರ್ಘ ಚರ್ಚೆ ನಡೆಸಿ, ಪ್ರಮುಖ ತೀರ್ಮಾನಗಳನ್ನು ಕೈಗೊಳ್ಳಲಾಯಿತು.
ಸಭೆಗೆ ಆಗಮಿಸಿದ್ದ ಎಲ್ಲಾ ಪದಾಧಿಕಾರಿಗಳಿಗೆ ತಾಳ ಹಾಗೂ ಶಾಲು ಹೊದಿಸಿ ಗೌರವಿಸಲಾಯಿತು. ವೇದಿಕೆಯಲ್ಲಿ ರಾಜ್ಯ ಉಪಾಧ್ಯಕ್ಷ ರಾಜೇಂದ್ರ ಬನ್ನೂರು ಉಪಸ್ಥಿತರಿದ್ದರು. ಉಡುಪಿ ಜಿಲ್ಲಾ ಸಮನ್ವಯಾಧಿಕಾರಿ ರವೀಂದ್ರ ಎಸ್. ಬನ್ನೂರು ಸ್ವಾಗತಿಸಿದರೆ, ದಕ್ಷಿಣ ಕನ್ನಡ ಜಿಲ್ಲಾ ಸಮನ್ವಯಾಧಿಕಾರಿ ಸಂತೋಷ್ ಪಿ. ಅಳಿಯೂರು ಕಾರ್ಯಕ್ರಮ ನಿರೂಪಿಸಿದರು.




