ಬೆಳ್ತಂಗಡಿ: ತಾಲೂಕಿನ ಇಂದಬೆಟ್ಟು ಗ್ರಾಮದ ಬೊಳ್ಳೂರು ನದಿ ಪಾತ್ರದಲ್ಲಿ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಅಡ್ಡೆ ಮೇಲೆ ಬೆಳ್ತಂಗಡಿ ಪೊಲೀಸರು ಮಿಂಚಿನ ದಾಳಿ ನಡೆಸಿ, ಎರಡು ಟಿಪ್ಪರ್ ವಾಹನಗಳನ್ನು ವಶಕ್ಕೆ ಪಡೆದ ಘಟನೆ ಮಂಗಳವಾರ (ಆಗಸ್ಟ್ 18) ಮುಂಜಾನೆ ನಡೆದಿದೆ.
ಬೊಳ್ಳೂರು ನದಿಯಿಂದ ಕಾನೂನುಬಾಹಿರವಾಗಿ ಮರಳು ಎತ್ತಿ ಸಾಗಿಸಲಾಗುತ್ತಿದೆ ಎಂಬ ದೂರುಗಳು ಸ್ಥಳೀಯರಿಂದ ಕೇಳಿಬರುತ್ತಿದ್ದವು. ಈ ಕುರಿತು ಸಿಕ್ಕ ಖಚಿತ ಮಾಹಿತಿಯನ್ನಾಧರಿಸಿ ಕಾರ್ಯಾಚರಣೆಗಿಳಿದ ಬೆಳ್ತಂಗಡಿ ಪೊಲೀಸ್ ತಂಡ, ಸ್ಥಳಕ್ಕೆ ದಿಢೀರ್ ದಾಳಿ ನಡೆಸಿದೆ. ಈ ವೇಳೆ ನದಿ ದಂಡೆಯಲ್ಲಿ ಮರಳು ತುಂಬಿಸಿಕೊಂಡು ಸಾಗಾಟಕ್ಕೆ ಸಿದ್ಧವಾಗಿದ್ದ ಎರಡು ಟಿಪ್ಪರ್‌ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ವಶಪಡಿಸಿಕೊಂಡ ವಾಹನಗಳ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಮರಳು ಮಾಫಿಯಾದಲ್ಲಿ ಭಾಗಿಯಾಗಿರುವ ವಾಹನಗಳ ಮಾಲೀಕರು ಹಾಗೂ ಚಾಲಕರ ಪತ್ತೆಗೆ ತನಿಖೆ ತೀವ್ರಗೊಳಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
