ಮಂಗಳೂರು: ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಪೋಕ್ಸೋ ಪ್ರಕರಣದ ವಿಚಾರಣಾಧೀನ ಬಂದಿಯೊಬ್ಬ ಪೊಲೀಸರ ಕಣ್ಣು ತಪ್ಪಿಸಿ ಪರಾರಿಯಾಗಿರುವ ಘಟನೆ ಮಂಗಳೂರಿನ ಜಿಲ್ಲಾ ವೆನ್ಲಾಕ್ ಆಸ್ಪತ್ರೆಯಲ್ಲಿ ನಡೆದಿದೆ.
ಮೂಡುಬಿದಿರೆ ಮೂಲದ, ಪ್ರಸ್ತುತ ಬಾಡಿಗೆ ಮನೆಯಲ್ಲಿ ವಾಸವಿದ್ದ ರೋಶನ್ ಫರ್ನಾಂಡಿಸ್ (36) ಪರಾರಿಯಾದ ಆರೋಪಿ.
ಘಟನೆಯ ವಿವರ:
ಪೋಕ್ಸೋ ಕಾಯ್ದೆಯಡಿ ಬಂಧನಕ್ಕೊಳಗಾಗಿದ್ದ ರೋಶನ್‌ನನ್ನು ಮಂಗಳೂರಿನ ಕಾರಾಗೃಹದಲ್ಲಿ ಇರಿಸಲಾಗಿತ್ತು. ಆದರೆ, ಆತನಿಗೆ ಇದ್ದಕ್ಕಿದ್ದಂತೆ ಅನಾರೋಗ್ಯ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಜೈಲು ಸಿಬ್ಬಂದಿ ಆತನನ್ನು ವೆನ್ಲಾಕ್ ಆಸ್ಪತ್ರೆಗೆ ಸೇರಿಸಿದ್ದರು. ಭಾನುವಾರ ಬೆಳಗಿನ ಜಾವದ ವೇಳೆಗೆ ಆಸ್ಪತ್ರೆಯಲ್ಲಿದ್ದ ಭದ್ರತಾ ಸಿಬ್ಬಂದಿ ಮತ್ತು ಪೊಲೀಸರ ಕಣ್ಣು ತಪ್ಪಿಸಿ ಈತ ಪರಾರಿಯಾಗಿದ್ದಾನೆ.
ತನಿಖೆ ಚುರುಕು:
ಆರೋಪಿ ಎಸ್ಕೇಪ್ ಆಗಿರುವ ಕುರಿತು ಜೈಲು ಅಧಿಕಾರಿಗಳು ತಕ್ಷಣವೇ ಕಮಿಷನರೇಟ್/ಪಾಂಡೇಶ್ವರ ಪೊಲೀಸ್ ಠಾಣೆಗೆ ಅಧಿಕೃತ ದೂರು ನೀಡಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕುಮಾರ್ ಕೆ. ಅವರು, "ಜೈಲು ಸಿಬ್ಬಂದಿ ನೀಡಿದ ದೂರಿನನ್ವಯ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ತನಿಖೆ ಮುಂದುವರಿದಿದೆ" ಎಂದು ತಿಳಿಸಿದ್ದಾರೆ.
ಘಟನೆ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ಪೊಲೀಸರು ಮತ್ತು ಕಾರಾಗೃಹ ಇಲಾಖೆ ಸಿಬ್ಬಂದಿ ಜಂಟಿ ಕಾರ್ಯಾಚರಣೆ ಆರಂಭಿಸಿದ್ದು, ಆರೋಪಿ ರೋಶನ್ ಪತ್ತೆಗೆ ವ್ಯಾಪಕ ಬಲೆ ಬೀಸಿದ್ದಾರೆ.
