ಬೆಂಗಳೂರು:ರಾಜ್ಯದ ಮಾಜಿ ಶಿಕ್ಷಣ ಸಚಿವ ಹಾಗೂ ತಿಪಟೂರು ಕ್ಷೇತ್ರದ ಮಾಜಿ ಶಾಸಕರಾಗಿದ್ದ ಬಿ.ಸಿ. ನಾಗೇಶ್ (65) ಅವರು ಆಕ್ಟೋಬರ್ 18ರ ಮಂಗಳವಾರದಂದು ನಿಧನರಾಗಿದ್ದಾರೆ.
ಕಳೆದ ಒಂದು ವರ್ಷದಿಂದ ಮಿದುಳಿನ ಗಂಟು (ಬ್ರೈನ್ ಟ್ಯೂಮರ್) ಸಮಸ್ಯೆಯಿಂದ ಬಳಲುತ್ತಿದ್ದ ಅವರಿಗೆ ಎರಡು ಬಾರಿ ಶಸ್ತ್ರಚಿಕಿತ್ಸೆ ಮಾಡಲಾಗಿತ್ತು. ಬೆಂಗಳೂರಿನಲ್ಲಿರುವ ಮಗಳ ನಿವಾಸದಲ್ಲಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಮೃತರು ಓರ್ವ ಮಗ ಹಾಗೂ ಮಗಳನ್ನು ಅಗಲಿದ್ದು, ಇಂದು (ಆಗಸ್ಟ್ 19) ಅವರ ಸ್ವಂತ ಊರಾದ ತಿಪಟೂರಿನಲ್ಲಿ ಅಂತಿಮ ಸಂಸ್ಕಾರ ನೆರವೇರಲಿದೆ.
ಸಂಘ ಪರಿವಾರದಿಂದ ರಾಜಕೀಯ ರಂಗಕ್ಕೆ:
1959ರ ಜುಲೈ 1ರಂದು ಜನಿಸಿದ ಬಿ.ಸಿ. ನಾಗೇಶ್ ಅವರು, ತಮ್ಮ ವಿದ್ಯಾರ್ಥಿ ದೆಸೆಯಲ್ಲೇ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ABVP) ಮೂಲಕ ಸಕ್ರಿಯರಾಗಿದ್ದರು. ನಂತರ ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಪೂರ್ಣಕಾಲಿಕ ಕಾರ್ಯಕರ್ತರಾಗಿ ಸುದೀರ್ಘ ಕಾಲ ಸೇವೆ ಸಲ್ಲಿಸಿದ್ದರು.
1984ರಲ್ಲಿ ಅಧಿಕೃತವಾಗಿ ಭಾರತೀಯ ಜನತಾ ಪಾರ್ಟಿ (BJP) ಸೇರ್ಪಡೆಯಾದ ಅವರು, ಪಕ್ಷದ ಸಂಘಟನೆಯಲ್ಲಿ ವಿವಿಧ ಪ್ರಮುಖ ಜವಾಬ್ದಾರಿಗಳನ್ನು ವಹಿಸಿಕೊಂಡು ಪ್ರಮುಖ ನಾಯಕರಾಗಿ ಹೊರಹೊಮ್ಮಿದ್ದರು.
ಸಚಿವರಾಗಿ ಸೇವೆ:
2008 ಮತ್ತು 2018ರ ವಿಧಾನಸಭಾ ಚುನಾವಣೆಗಳಲ್ಲಿ ತಿಪಟೂರು ಕ್ಷೇತ್ರದಿಂದ ಸ್ಪರ್ಧಿಸಿ ಶಾಸಕರಾಗಿ ಆಯ್ಕೆಯಾಗಿದ್ದ ಅವರು, 2023ರ ಚುನಾವಣೆಯಲ್ಲಿ ಪರಾಭವಗೊಂಡಿದ್ದರು. 2021ರಿಂದ 2023ರ ಅವಧಿಯಲ್ಲಿ ಬಸವರಾಜ ಬೊಮ್ಮಾಯಿ ಸಂಪುಟದಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ 'ಸಕಾಲ' ಖಾತೆಯ ಸಚಿವರಾಗಿ ಕಾರ್ಯನಿರ್ವಹಿಸಿದ್ದರು.
ಬಿ.ಸಿ. ನಾಗೇಶ್ ಅವರ ಅಕಾಲಿಕ ಅಗಲಿಕೆಗೆ ವಿವಿಧ ರಾಜಕೀಯ ರಂಗದ ಮುಖಂಡರು, ಶಿಕ್ಷಣ ಕ್ಷೇತ್ರದ ಗಣ್ಯರು ಹಾಗೂ ಅಭಿಮಾನಿಗಳು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
