ಶಿವಮೊಗ್ಗ:ಅತಿಯಾದ ವೇಗವಾಗಿ ಚಲಿಸುತ್ತಿದ್ದ ಕಾರೊಂದು ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಮರಕ್ಕೆ ಭೀಕರವಾಗಿ ಡಿಕ್ಕಿ ಹೊಡೆದ ಪರಿಣಾಮ, ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ಶಿವಮೊಗ್ಗ ನಗರದ ಹೊರವಲಯದ ಹರಿಗೆ ಬಳಿ ಮಂಗಳವಾರ ಬೆಳಗಿನ ಜಾವ ಸಂಭವಿಸಿದೆ.
ಅಪಘಾತದ ರಭಸಕ್ಕೆ ಕಾರು ಮೂರು ತುಂಡಾಗಿದ್ದು, ಘಟನೆಯ ಭೀಕರತೆಗೆ ಸಾಕ್ಷಿಯಾಗಿದೆ.
ಸಿಗೇಹಟ್ಟಿ ನಿವಾಸಿ ದುರಂತ ಸಾವು
ಅಪಘಾತದಲ್ಲಿ ಮೃತಪಟ್ಟವರನ್ನು ಶಿವಮೊಗ್ಗದ ಸಿಗೇಹಟ್ಟಿ ಬಡಾವಣೆಯ ನಿವಾಸಿ ಗುರುರಾಜ್ (22) ಎಂದು ಗುರುತಿಸಲಾಗಿದೆ. ಇವರು ವೃತ್ತಿಯಲ್ಲಿ ಆಟೋ ಚಾಲಕರಾಗಿದ್ದರು.
ಪೊಲೀಸರ ಮಾಹಿತಿಯಂತೆ, ಮಂಗಳವಾರ ಬೆಳಗಿನ ಜಾವ ಸುಮಾರು 2 ಗಂಟೆಯ ವೇಳೆಗೆ ಗುರುರಾಜ್ ಅವರು ಹೊಂಡಾ ಸಿಟಿ ಕಾರಿನಲ್ಲಿ ಶಿವಮೊಗ್ಗದಿಂದ ಭದ್ರಾವತಿ ಕಡೆಗೆ ಪ್ರಯಾಣಿಸುತ್ತಿದ್ದರು. ಈ ವೇಳೆ ಹರಿಗೆ ಹಾಗೂ ಮಲವಗೊಪ್ಪ ಗ್ರಾಮಗಳ ನಡುವೆ ಅಪಘಾತ ಸಂಭವಿಸಿದೆ.
ನಿಯಂತ್ರಣ ತಪ್ಪಿದ ಕಾರು
ಕಾರು ಅತಿಯಾದ ವೇಗದಲ್ಲಿದ್ದ ಕಾರಣ, ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ತೀವ್ರವಾಗಿ ಡಿಕ್ಕಿಯಾಗಿದೆ. ಡಿಕ್ಕಿಯ ಹೊಡೆತಕ್ಕೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿ ಮೂರು ತುಂಡುಗಳಾಗಿ ಬಿದ್ದಿದೆ. ತೀವ್ರ ಗಾಯಗೊಂಡ ಗುರುರಾಜ್ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.
ಪೊಲೀಸರ ಪ್ರತಿಕ್ರಿಯೆ
ಘಟನೆಯ ಕುರಿತು ಶಿವಮೊಗ್ಗ ಸಂಚಾರಿ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ (PI) ದೇವರಾಜ್ ಅವರು ಪ್ರತಿಕ್ರಿಯಿಸಿದ್ದು, "ಕಾರು ಶಿವಮೊಗ್ಗದಿಂದ ಭದ್ರಾವತಿ ಮಾರ್ಗವಾಗಿ ತೆರಳುತ್ತಿದ್ದಾಗ ಈ ದುರಂತ ಸಂಭವಿಸಿದೆ. ಪ್ರಾಥಮಿಕ ಮಾಹಿತಿಯಂತೆ, ಮೃತ ಗುರುರಾಜ್ ಚಲಾಯಿಸುತ್ತಿದ್ದ ಕಾರು ಭಂಡಾರಿ ಗ್ಯಾಸ್ ಏಜೆನ್ಸಿಗೆ ಸೇರಿದ್ದು ಎನ್ನಲಾಗಿದೆ. ಈ ಕುರಿತು ವಾಹನದ ದಾಖಲೆಗಳನ್ನು ಪರಿಶೀಲಿಸಲಾಗುತ್ತಿದೆ" ಎಂದು ತಿಳಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ ಸಂಚಾರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ಮುಂದಿನ ಕಾನೂನು ಕ್ರಮ ಜರುಗಿಸಿದ್ದಾರೆ.
