ಉಡುಪಿ: ಕರಾವಳಿಯ ಭರವಸೆಯ ಯುವ ಸ್ಯಾಕ್ಸಫೋನ್ ಕಲಾವಿದೆ ನಮೃತಾ ದೇವಾಡಿಗ (22) ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ಕೊನೆಯುಸಿರೆಳೆದಿದ್ದಾರೆ.
ಬ್ರಹ್ಮಾವರ ತಾಲೂಕಿನ ನೀಲಾವರ ಗ್ರಾಮದ ಮೂಲದವರಾದ ನಮೃತಾ, ಬೆಂಗಳೂರಿನಲ್ಲಿ ಉನ್ನತ ವ್ಯಾಸಂಗ ಮಾಡುತ್ತಿದ್ದರು. ಇತ್ತೀಚೆಗೆ ವೈಯಕ್ತಿಕ ಕಾರಣಗಳಿಂದ ತೀವ್ರ ಮನನೊಂದಿದ್ದ ಅವರು ವಿಷ ಪ್ರಾಶನ ಮಾಡಿದ್ದರೆನ್ನಲಾಗಿದೆ. ತಕ್ಷಣವೇ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿತ್ತು. ತದನಂತರ ಕುಟುಂಬಸ್ಥರು ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ದುರದೃಷ್ಟವಶಾತ್ ಸೋಮವಾರ ಬೆಳಿಗ್ಗೆ ಚಿಕಿತ್ಸೆಗೆ ಸ್ಪಂದಿಸದೆ ಅವರು ಮೃತಪಟ್ಟಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
