ರಾಜಕೀಯ

ಬೆಂಗಳೂರು : ಜೈಲಿನಿಂದ ಬಿಡುಗಡೆಯಾಗುತ್ತಿದ್ದಂತೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿಯಾದ ವಿನಯ್ ಕುಲಕರ್ಣಿ!

 


ಬೆಂಗಳೂರು:ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಹೈಕೋರ್ಟ್‌ನಿಂದ ತಾತ್ಕಾಲಿಕ ರಿಲೀಫ್ ಪಡೆದು ಜೈಲಿನಿಂದ ಹೊರಬಂದಿರುವ ಮಾಜಿ ಸಚಿವ, ಶಾಸಕ ವಿನಯ್ ಕುಲಕರ್ಣಿ, ಇಂದು ಮುಂಜಾನೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದ್ದಾರೆ.

​ಸುಮಾರು 106 ದಿನಗಳ ಜೈಲುವಾಸದ ಬಳಿಕ ನಿನ್ನೆ ರಾತ್ರಿ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾದ ವಿನಯ್ ಕುಲಕರ್ಣಿ, ಇಂದು ಬೆಳಗ್ಗೆ ತಮ್ಮ ಪತ್ನಿ ಹಾಗೂ ಮಕ್ಕಳೊಂದಿಗೆ ಸದಾಶಿವನಗರದಲ್ಲಿರುವ ಡಿ.ಕೆ. ಶಿವಕುಮಾರ್ ಅವರ ನಿವಾಸಕ್ಕೆ ತೆರಳಿ ಭೇಟಿಯಾಗಿದ್ದಾರೆ.

​ನ್ಯಾಯಾಲಯ ಹಾಗೂ ಜನತೆಗೆ ಧನ್ಯವಾದ

​ಸಿಎಂ ಭೇಟಿಯ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ವಿನಯ್ ಕುಲಕರ್ಣಿ, "ನ್ಯಾಯಾಲಯದ ತೀರ್ಪಿಗೆ ಹಾಗೂ ನನ್ನ ಕ್ಷೇತ್ರದ ಜನತೆಗೆ ಧನ್ಯವಾದಗಳನ್ನು ಅರ್ಪಿಸುತ್ತೇನೆ. ಪ್ರಸ್ತುತ ನಾನು ಯಾವುದೇ ಸಚಿವ ಸ್ಥಾನದ ಆಕಾಂಕ್ಷಿಯಲ್ಲ. ಸಿಎಂ ಅವರೊಂದಿಗೆ ಯಾವುದೇ ರಾಜಕೀಯ ವಿಷಯಗಳ ಕುರಿತು ಚರ್ಚಿಸಿಲ್ಲ. ಮುಂದಿನ ದಿನಗಳಲ್ಲಿ ವಿಸ್ತೃತವಾಗಿ ಮಾತನಾಡುತ್ತೇನೆ" ಎಂದು ಸ್ಪಷ್ಟಪಡಿಸಿದರು.

​ಹೈಕೋರ್ಟ್‌ನಲ್ಲಿ ಸಿಕ್ಕಿದ್ದೇನು?

​ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಿಧಿಸಿದ್ದ ಜೀವಾವಧಿ ಶಿಕ್ಷೆಯನ್ನು ಪ್ರಶ್ನಿಸಿ ವಿನಯ್ ಕುಲಕರ್ಣಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಮೊಹಮ್ಮದ್ ನವಾಜ್ ಹಾಗೂ ನ್ಯಾಯಮೂರ್ತಿ ಬಸವರಾಜ್ ಅವರಿದ್ದ ವಿಭಾಗೀಯ ಪೀಠ, ಕೆಳನ್ಯಾಯಾಲಯ ವಿಧಿಸಿದ್ದ ಶಿಕ್ಷೆ ಮತ್ತು ದೋಷಿ ತೀರ್ಪಿಗೆ ತಡೆ ನೀಡಿ, ಷರತ್ತುಬದ್ಧ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಈ ಪ್ರಕರಣದಲ್ಲಿ ವಿನಯ್ ಕುಲಕರ್ಣಿ ಸೇರಿದಂತೆ ಒಟ್ಟು 10 ಆರೋಪಿಗಳಿಗೆ ರಿಲೀಫ್ ಸಿಕ್ಕಿದೆ.

​ಅಭಿಮಾನಿಗಳಿಂದ ಅದ್ದೂರಿ ಸ್ವಾಗತ

​ನಿನ್ನೆ ರಾತ್ರಿ ಜೈಲಿನಿಂದ ಹೊರಬರುತ್ತಿದ್ದಂತೆ ವಿನಯ್ ಕುಲಕರ್ಣಿ ಅವರಿಗೆ ಕಾರಾಗೃಹದ ಹೊರಗೆ ನೆರೆದಿದ್ದ ನೂರಾರು ಬೆಂಬಲಿಗರು ಮತ್ತು ಅಭಿಮಾನಿಗಳು ಹೂಮಾಲೆ ಹಾಕಿ ಅದ್ದೂರಿ ಸ್ವಾಗತ ಕೋರಿದರು. ಈ ವೇಳೆ ಮಾಧ್ಯಮಗಳಿಗೆ ಯಾವುದೇ ಹೇಳಿಕೆ ನೀಡದ ಅವರು, ನೇರವಾಗಿ ಡಾಲರ್ಸ್ ಕಾಲೋನಿಯಲ್ಲಿರುವ ತಮ್ಮ ನಿವಾಸಕ್ಕೆ ತೆರಳಿದ್ದರು.



image