ಬೆಳ್ತಂಗಡಿ: ಶಾಲೆಗೆ ಕರೆದೊಯ್ಯುತ್ತಿದ್ದ ರಿಕ್ಷಾ ಚಾಲಕನೊಬ್ಬ 14 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ದೌರ್ಜನ್ಯವೆಸಗಿ, ಬೆದರಿಕೆಯೊಡ್ಡಿ ಅತ್ಯಾಚಾರ ಎಸಗಿರುವ ಶೋಚನೀಯ ಘಟನೆ ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವರದಿಯಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಜಮಾಲುದ್ದೀನ್ ಎಂಬಾತನನ್ನು ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಘಟನೆಯ ವಿವರ:
ವೇಣೂರು ನಿವಾಸಿಯಾಗಿರುವ ಆರೋಪಿ ಜಮಾಲುದ್ದೀನ್, ಕಳೆದ ಕೆಲವು ತಿಂಗಳುಗಳಿಂದ ಸಂತ್ರಸ್ತ ಬಾಲಕಿಯನ್ನು ತನ್ನ ಆಟೋ ರಿಕ್ಷಾದಲ್ಲಿ ಶಾಲೆಗೆ ಕರೆದೊಯ್ಯುತ್ತಿದ್ದನು. ಈ ಸಂದರ್ಭದಲ್ಲಿ ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಲು ಯತ್ನಿಸುತ್ತಿದ್ದ ಎನ್ನಲಾಗಿದೆ. ಬಾಲಕಿಯು ಇದನ್ನು ವಿರೋಧಿಸಿದಾಗ, ಘಟನೆಯ ಬಗ್ಗೆ ಯಾರಿಗಾದರೂ ತಿಳಿಸಿದರೆ ಜೀವ ಸಹಿತ ಬಿಡುವುದಿಲ್ಲವೆಂದು ಬೆದರಿಕೆ ಹಾಕಿದ್ದನು. ಇದರಿಂದ ಭಯಬಿದ್ದ ಬಾಲಕಿಯು ವಿಚಾರವನ್ನು ಯಾರ ಬಳಿಯೂ ಹಂಚಿಕೊಂಡಿರಲಿಲ್ಲ.
ದಿನಾಂಕ 13.08.2026 ರಂದು ಸಂಜೆ ಬಾಲಕಿ ಮನೆಯಲ್ಲಿ ಒಬ್ಬಳೇ ಇದ್ದ ಸಮಯವನ್ನು ನೋಡಿಕೊಂಡು ಬಂದ ಆರೋಪಿ, ಆಕೆಗೆ ಬೆದರಿಕೆ ಹಾಕಿ ಲೈಂಗಿಕ ದೌರ್ಜನ್ಯವೆಸಗಿದ್ದಾನೆ.
ಪೋಕ್ಸೋ ಅಡಿ ಪ್ರಕರಣ ದಾಖಲು:
ಘಟನೆಯಿಂದ ಆಘಾತಕ್ಕೊಳಗಾದ ಬಾಲಕಿಯು ದಿನಾಂಕ 15.08.2026 ರಂದು ಧೈರ್ಯಮಾಡಿ ವೇಣೂರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಸಂತ್ರಸ್ತೆಯ ದೂರಿನ ಆಧಾರದ ಮೇಲೆ ಪೊಲೀಸರು ಅ.ಕ್ರ: 56/2026 ರಲ್ಲಿ BNS 2023 ರ ಕಲಂ 75(2), 64(1), 65(1), 351(3) ಹಾಗೂ ಪೋಕ್ಸೋ ಕಾಯಿದೆ (POCSO Act 2012) ಕಲಂ 4(2), 8, 12 ರ ಅಡಿಯಲ್ಲಿ ಗಂಭೀರ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ದೂರು ದಾಖಲಾದ ತಕ್ಷಣವೇ ಕಾರ್ಯಾಚರಣೆ ನಡೆಸಿದ ವೇಣೂರು ಪೊಲೀಸರು ಆರೋಪಿ ಜಮಾಲುದ್ದೀನ್‌ನನ್ನು ಆಸರೆಗೆ ತೆಗೆದುಕೊಂಡು, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಮಾನ್ಯ ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ.
