ವಿಟ್ಲ: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿ, ಬೆದರಿಕೆಯೊಡ್ಡಿದ್ದ ಆರೋಪಿಯೊಬ್ಬನನ್ನು ವಿಟ್ಲ ಠಾಣೆ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತ ಆರೋಪಿಯನ್ನು ವಿಟ್ಲ ಕೊಂಡಗಾಯಿ ನಿವಾಸಿ ಉಮೇಶ್ (53) ಎಂದು ಗುರುತಿಸಲಾಗಿದೆ. ಬಂಧಿತನಿಗೆ ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ.
ಘಟನೆಯ ಹಿನ್ನೆಲೆ:
ಆಗಸ್ಟ್ 15ರಂದು ಬಾಲಕನು ಅಳಿಕೆಯಿಂದ ಪುತ್ತೂರಿನತ್ತ ಖಾಸಗಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ. ಈ ವೇಳೆ ವಿಟ್ಲ ಖಾಸಗಿ ಬಸ್ ನಿಲ್ದಾಣದಲ್ಲಿ ಬಸ್ ಹತ್ತಿದ ಆರೋಪಿ ಉಮೇಶ್, ಬಾಲಕನ ಪಕ್ಕದ ಸೀಟಿನಲ್ಲಿ ಕುಳಿತು ಅನುಚಿತವಾಗಿ ವರ್ತಿಸಿದ್ದನೆನ್ನಲಾಗಿದೆ.
ಇಷ್ಟಕ್ಕೇ ನಿಲ್ಲದ ಆರೋಪಿಯ ಕಾಟ, ಬಾಲಕ ಮನೆ ತಲುಪಿದ ಮೇಲೆಯೂ ಮುಂದುವರಿದಿದೆ. ಬಾಲಕನ ಮನೆಗೆ ಅಕ್ರಮವಾಗಿ ನುಗ್ಗಿದ ಆರೋಪಿ, ಆತನಿಗೆ ಲೈಂಗಿಕ ಕಿರುಕುಳ ನೀಡಿ, ವಿಷಯವನ್ನು ಯಾರ ಬಳಿಯಾದರೂ ಹೇಳಿದರೆ ಪರಿಣಾಮ ನೆಟ್ಟಗಿರುವುದಿಲ್ಲ ಎಂದು ಬೆದರಿಕೆ ಹಾಕಿದ್ದ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಪೊಲೀಸ್ ಕಸ್ಟಡಿಗೆ:
ಈ ಕುರಿತು ಸಂತ್ರಸ್ತ ಬಾಲಕನ ಕುಟುಂಬಸ್ಥರು ನೀಡಿದ ದೂರಿನನ್ವಯ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತಕ್ಷಣ ಕಾರ್ಯಪ್ರವೃತ್ತರಾದ ವಿಟ್ಲ ಪೊಲೀಸರು ಆರೋಪಿ ಉಮೇಶನ್‌ನನ್ನು ವಶಕ್ಕೆ ಪಡೆದು, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ವಿಚಾರಣೆ ನಡೆಸಿದ ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.
