ದಕ್ಷಿಣ ಕನ್ನಡ

ಪುತ್ತೂರು: ಕಠಿಣ ಕ್ರಮಕ್ಕೆ ಆಗ್ರಹಿಸಿ ಬೃಹತ್ 'ಪುತ್ತೂರು ಚಲೋ' ಜಾಥಾ; ಸರ್ಕಾರದ ವಿರುದ್ಧ ಭುಗಿಲೆದ್ದ ಆಕ್ರೋಶ



ಪುತ್ತೂರು: ದರ್ಬೆಯ ಡಿಜಿಟಲ್ ಸೇವಾ ಕೇಂದ್ರದಲ್ಲಿ ನಡೆದ ಗಲಾಟೆ ಹಾಗೂ ಮಹಿಳೆಯ ಮೇಲಿನ ಹಲ್ಲೆ ಯತ್ನ ಪ್ರಕರಣವನ್ನು ಖಂಡಿಸಿ, ಹಿಂದೂ ಸಂಘಟನೆಗಳ ಒಕ್ಕೂಟದ ವತಿಯಿಂದ ನಗರದಲ್ಲಿ ಮಂಗಳವಾರ ಬೃಹತ್ 'ಪುತ್ತೂರು ಚಲೋ' ಪ್ರತಿಭಟನಾ ಜಾಥಾ ನಡೆಯಿತು.

​ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥರನ್ನು ಕೂಡಲೇ ಬಂಧಿಸಿ, ಸೂಕ್ತ ತನಿಖೆ ನಡೆಸಬೇಕೆಂದು ಆಗ್ರಹಿಸಿ ಸಹಸ್ರಾರು ಸಂಖ್ಯೆಯಲ್ಲಿ ಒಗೂಡಿದ ಕಾರ್ಯಕರ್ತರು ರಾಜ್ಯ ಸರ್ಕಾರ ಹಾಗೂ ಪೊಲೀಸ್ ಇಲಾಖೆಯ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

​ದರ್ಬೆಯಿಂದ ಶುರುವಾದ ಪ್ರತಿಭಟನಾ ಕಾಲ್ನಡಿಗೆ:

ದರ್ಬೆ ವೃತ್ತದಿಂದ ಆರಂಭಗೊಂಡ ಈ ಬೃಹತ್ ರ‍್ಯಾಲಿಯು ನಗರದ ಪ್ರಮುಖ ರಸ್ತೆಗಳಲ್ಲಿ ಸಾಗಿ ಶ್ರೀ ಮಹಾಲಿಂಗೇಶ್ವರ ದೇವರ ಗದ್ದೆಯಲ್ಲಿ ಸಭಾ ಕಾರ್ಯಕ್ರಮವಾಗಿ ಮಾರ್ಪಾಡಾಯಿತು. ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಸಾವಿರಾರು ಕಾರ್ಯಕರ್ತರು, ಮಹಿಳೆಯರಿಗೆ ರಕ್ಷಣೆ ನೀಡುವಲ್ಲಿ ಇಲಾಖೆ ವಿಫಲವಾಗಿದೆ ಎಂದು ಆರೋಪಿಸಿ ಸರ್ಕಾರ ಹಾಗೂ ಪೊಲೀಸರ ವಿರುದ್ಧ ಹರಿಹಾಯ್ದರು.

​ಬಿಗಿ ಪೊಲೀಸ್ ಬಂದೋಬಸ್ತ್:

ರ್ಯಾಲಿಯ ಹಿನ್ನೆಲೆಯಲ್ಲಿ ನಗರದಾದ್ಯಂತ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸ್ ಇಲಾಖೆಯು ಬಿಗಿ ಭದ್ರತೆ ಕೈಗೊಂಡಿತ್ತು. ಮುಂಜಾಗ್ರತಾ ಕ್ರಮವಾಗಿ ಹೆಚ್ಚುವರಿ ತುಕಡಿಗಳನ್ನು ನಿಯೋಜಿಸಲಾಗಿತ್ತು.

​ಮಹಿಳೆಯ ಮೇಲೆ ಹಲ್ಲೆಗೆ ಯತ್ನಿಸಿದ ಆರೋಪಿಗಳನ್ನು ವಿಳಂಬವಿಲ್ಲದೆ ತಕ್ಷಣವೇ ಬಂಧಿಸಬೇಕು ಮತ್ತು ಪ್ರಕರಣದ ನಿಷ್ಪಕ್ಷಪಾತ ತನಿಖೆಯಾಗಬೇಕು ಎಂದು ಪ್ರತಿಭಟನಾಕಾರರು ಈ ಸಂದರ್ಭದಲ್ಲಿ ಒತ್ತಾಯಿಸಿದರು.



image