ದಕ್ಷಿಣ ಕನ್ನಡ

ಬೆಳ್ತಂಗಡಿ : ಪ್ರಚೋದನಾಕಾರಿ ಭಾಷಣ ಪ್ರಕರಣ: SDPI ನಾಯಕ ರಿಯಾಜ್ ಫರಂಗಿಪೇಟೆಗೆ 6 ತಿಂಗಳು ಜೈಲು ಶಿಕ್ಷೆ, ದಂಡ

 


ಬೆಳ್ತಂಗಡಿ: ಸುಮಾರು 11 ವರ್ಷಗಳ ಹಿಂದೆ ನಡೆದಿದ್ದ ಧಾರ್ಮಿಕ ಭಾವನೆಗೆ ಧಕ್ಕೆ ತರುವಂತಹ ಪ್ರಚೋದನಾಕಾರಿ ಭಾಷಣ ಪ್ರಕರಣಕ್ಕೆ ಸಂಬಂಧಿಸಿದಂತೆ, ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮಹಮ್ಮದ್ ರಿಯಾಜ್ ಫರಂಗಿಪೇಟೆ ಅವರಿಗೆ ಬೆಳ್ತಂಗಡಿ ನ್ಯಾಯಾಲಯ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿ ತೀರ್ಪು ನೀಡಿದೆ.

​ಪ್ರಕರಣದ ಹಿನ್ನೆಲೆ:

2015ರ ಜುಲೈ 23ರಂದು ಬೆಳ್ತಂಗಡಿ ತಾಲೂಕು ಕಚೇರಿ ಮುಂಭಾಗದಲ್ಲಿ 'ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ' (PFI) ಬೆಳ್ತಂಗಡಿ ವಲಯದ ವತಿಯಿಂದ ಪ್ರತಿಭಟನಾ ಸಭೆಯೊಂದನ್ನು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ರಿಯಾಜ್ ಫರಂಗಿಪೇಟೆ ಅವರು ಧಾರ್ಮಿಕ ಭಾವನೆಗಳನ್ನು ಪ್ರಚೋದಿಸುವ ರೀತಿಯಲ್ಲಿ ಪ್ರಸಂಗ ಒಂದರಲ್ಲಿ ಭಾಷಣ ಮಾಡಿದ್ದರು ಎಂಬ ಆರೋಪ ಕೇಳಿಬಂದಿತ್ತು.

​ಈ ಸಂಬಂಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಐಪಿಸಿ (IPC) ಸೆಕ್ಷನ್ 153(A) ಹಾಗೂ 295(A) ಅಡಿಯಲ್ಲಿ (ಪ್ರಕರಣ ಸಂಖ್ಯೆ: 315/2015) ಎಫ್‌ಐಆರ್ ದಾಖಲಾಗಿತ್ತು.

​ಸಾಕ್ಷ್ಯಾಧಾರ ಸಮೇತ ದೋಷಾರೋಪಣೆ:

ಪ್ರಕರಣದ ತನಿಖೆಯನ್ನು ಅಂದಿನ ಬೆಳ್ತಂಗಡಿ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ (PSI) ಹಾಗೂ ತನಿಖಾಧಿಕಾರಿ ರವಿ ಬಿ.ಎಸ್. ಅವರು ನಡೆಸಿ, ಅಗತ್ಯ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ (ಚಾರ್ಜ್‌ಶೀಟ್) ಸಲ್ಲಿಸಿದ್ದರು.

​ನ್ಯಾಯಾಲಯದ ಮಹತ್ವದ ತೀರ್ಪು:

ದೀರ್ಘ ವಿಚಾರಣೆ ನಡೆಸಿದ ಬೆಳ್ತಂಗಡಿ ನ್ಯಾಯಾಲಯದ ಮಾನ್ಯ ನ್ಯಾಯಾಧೀಶರಾದ ರಾಮಲಿಂಗಪ್ಪ ಅವರು, ಆರೋಪಿಯ ಮೇಲಿನ ಆರೋಪ ಸಾಬೀತಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.

​ಕಲಂ 153(A) ಅಡಿಯಲ್ಲಿ ರಿಯಾಜ್ ಫರಂಗಿಪೇಟೆ ಅವರಿಗೆ 6 ತಿಂಗಳ ಸಾದಾ ಕಾರಾಗೃಹ ಶಿಕ್ಷೆ ಮತ್ತು ₹10,000 ದಂಡ ವಿಧಿಸಿ ಆದೇಶಿಸಿದ್ದಾರೆ. ಪ್ರಕರಣದಲ್ಲಿ ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕರಾದ ಶ್ರೀಮತಿ ಆಶೀತಾ ಅವರು ಸಮರ್ಥವಾಗಿ ವಾದ ಮಂಡಿಸಿದ್ದರು.



image