ಮೂಡುಬಿದಿರೆ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಶೀಘ್ರದಲ್ಲೇ ಆಯೋಜನೆಗೊಳ್ಳಲಿರುವ 28ನೇ ವರ್ಷದ 'ಸಂಪ್ರದಾಯಿಕ ಭಜನಾ ಕಮ್ಮಟ'ದ ಹಿನ್ನೆಲೆಯಲ್ಲಿ, ಇಲ್ಲಿನ ತಾಲೂಕು ಯೋಜನಾ ಕಚೇರಿಯ ಸಭಾಂಗಣದಲ್ಲಿ ಪೂರ್ವಭಾವಿ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು.
ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಕೃಷ್ಣ ಕುಲಾಲ್ ಕಲ್ಲಮುಂಡ್ಕೂರು ಅವರು, ಧಾರ್ಮಿಕ ಸಂಸ್ಕೃತಿ ಮತ್ತು ಸೌಹಾರ್ದತೆಯನ್ನು ಬೆಳೆಸುವಲ್ಲಿ ಭಜನಾ ಮಂಡಳಿಗಳ ಪಾತ್ರ ಪ್ರಮುಖವಾದದ್ದು ಎಂದು ಅಭಿಪ್ರಾಯಪಟ್ಟರು.
ಕಾರ್ಯಕ್ರಮದ ಆರಂಭದಲ್ಲಿ ಸ್ವಾಗತ ಕೋರಿ ಪ್ರಾಸ್ತಾವಿಕವಾಗಿ ಮಾತನಾಡಿದ ತಾಲೂಕು ಯೋಜನಾಧಿಕಾರಿ ಧನಂಜಯ ಬಿ. ಅವರು, ಭಜನಾ ಮಂಡಳಿಗಳು ಹಾಗೂ ಮಂದಿರಗಳ ಅಭಿವೃದ್ಧಿಗಾಗಿ ಮತ್ತು ಧಾರ್ಮಿಕ ಚಟುವಟಿಕೆಗಳ ಪ್ರೋತ್ಸಾಹಕ್ಕಾಗಿ ಶ್ರೀ ಕ್ಷೇತ್ರ ಧರ್ಮಸ್ಥಳದ ಪೂಜ್ಯ ಹೆಗ್ಗಡೆಯವರು ನೀಡುತ್ತಿರುವ ಅನುದಾನ ಹಾಗೂ ಕೈಗೊಂಡಿರುವ ಅಭಿವೃದ್ಧಿ ಕಾರ್ಯಕ್ರಮಗಳ ಕುರಿತು ಸವಿಸ್ತಾರವಾಗಿ ವಿವರಿಸಿದರು.
ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಭಜನಾ ಪರಿಷತ್‌ನ ರಾಜ್ಯಾಧ್ಯಕ್ಷ ಚಂದ್ರಶೇಖರ್ ಸಾಲ್ಯಾನ್ ಅವರು, ಭಜನಾ ಪರಿಷತ್ ಅನ್ನು ಸಂಘಟನಾತ್ಮಕವಾಗಿ ಇನ್ನಷ್ಟು ಬಲಪಡಿಸುವುದು ಮತ್ತು ಗ್ರಾಮೀಣ ಮಟ್ಟದಲ್ಲಿ ಭಜನಾ ಕಲೆಯ ಬೆಳವಣಿಗೆಗೆ ಶ್ರಮಿಸುವ ಕುರಿತು ಮಾರ್ಗದರ್ಶನ ನೀಡಿದರು.
ಬಿಕಸಿತ ಭಜನಾ ಕಮ್ಮಟದ ರೂಪುರೇಷೆಗಳು ಹಾಗೂ ದಿನಚರಿಯ ಕುರಿತು ಜಿಲ್ಲಾ ಸಮನ್ವಯಾಧಿಕಾರಿ ಸಂತೋಷ್ ಪಿ. ಅಳಿಯೂರು ಸಂಪೂರ್ಣ ಮಾಹಿತಿ ಹಂಚಿಕೊಂಡರು. ಸಂಸ್ಥೆಯ ಗೌರವಾಧ್ಯಕ್ಷ ಅಶೋಕ್ ನಾಯ್ಕ್ ಅವರು ಕಮ್ಮಟಕ್ಕೆ ಶುಭ ಹಾರೈಸಿದರು.
ಸಭೆಯಲ್ಲಿ ಮೂಡುಬಿದಿರೆ ತಾಲೂಕಿನ ವಿವಿಧ ಭಜನಾ ಮಂಡಳಿಗಳ ಪದಾಧಿಕಾರಿಗಳು ಹಾಗೂ ಪ್ರಮುಖರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.
ತಾಲೂಕು ವಿಚಕ್ಷಣಾಧಿಕಾರಿ ವಸಂತ ದೇವಾಡಿಗ ಕಾರ್ಯಕ್ರಮ ನಿರೂಪಿಸಿದರೆ, ಕಚೇರಿ ಸಹಾಯಕಿ ನಯನ ಜೈನ್ ವಂದನಾರ್ಪಣೆ ಮಾಡಿದರು.
