ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರನ್ನಾಗಿ ಪದ್ಮರಾಜ್ ಆರ್. ಪೂಜಾರಿ ಅವರನ್ನು ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ನೇಮಕಗೊಳಿಸಿ ಆದೇಶಿಸಿದೆ. ಈ ಬಗ್ಗೆ ಕಾಂಗ್ರೆಸ್ ಸಂಸದ ಹಾಗೂ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರು ಅಧಿಕೃತ ಮಾಧ್ಯಮ ಪ್ರಕಟಣೆ ಹೊರಡಿಸಿದ್ದು, ಈ ಹೊಸ ನೇಮಕಾತಿಯು ತಕ್ಷಣದಿಂದಲೇ ಜಾರಿಗೆ ಬರಲಿದೆ ಎಂದು ಸ್ಪಷ್ಟಪಡಿಸಿದ್ದಾರೆ.
'ಸಂಘಟನ್ ಸೃಜನ ಅಭಿಯಾನ'ದ ಫಲಶೃತಿ
ಕಾಂಗ್ರೆಸ್ ಪಕ್ಷವನ್ನು ತಳಮಟ್ಟದಿಂದ ಬಲಪಡಿಸುವ ಉದ್ದೇಶದಿಂದ ದೇಶಾದ್ಯಂತ 'ಸಂಘಟನ್ ಸೃಜನ ಅಭಿಯಾನ'ವನ್ನು ಹಮ್ಮಿಕೊಳ್ಳಲಾಗಿದೆ. ಈ ಅಭಿಯಾನದ ಭಾಗವಾಗಿ ದಕ್ಷಿಣ ಕನ್ನಡ ಜಿಲ್ಲೆಗೆ ಎಐಸಿಸಿ ವೀಕ್ಷಕರನ್ನು ನಿಯೋಜಿಸಲಾಗಿತ್ತು. ವೀಕ್ಷಕರು ಸ್ಥಳೀಯ ಮುಖಂಡರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರೊಂದಿಗೆ ಸರಣಿ ಸಮಾಲೋಚನೆ ನಡೆಸಿ, ಜಿಲ್ಲೆಯ ರಾಜಕೀಯ ಪರಿಸ್ಥಿತಿಯ ಕುರಿತು ವಿಸ್ತೃತ ವರದಿ ಸಿದ್ಧಪಡಿಸಿ ಹೈಕಮಾಂಡ್‌ಗೆ ಸಲ್ಲಿಸಿದ್ದರು.
ಹಿರಿಯ ನಾಯಕರ ಸಲಹೆಯಂತೆ ಆಖೈರು ನಿರ್ಧಾರ
ವೀಕ್ಷಕರು ನೀಡಿದ ವರದಿಯನ್ನು ಕೂಲಂಕುಷವಾಗಿ ಪರಿಶೀಲಿಸಿದ ಹೈಕಮಾಂಡ್, ರಾಜ್ಯದ ಹಿರಿಯ ನಾಯಕರೊಂದಿಗೆ ವಿಸ್ತೃತವಾಗಿ ಚರ್ಚಿಸಿತು. ಅಂತಿಮವಾಗಿ ಎಲ್ಲರ ಅಭಿಪ್ರಾಯಗಳನ್ನು ಕ್ರೋಡೀಕರಿಸಿ ಪದ್ಮರಾಜ್ ಆರ್. ಪೂಜಾರಿ ಅವರನ್ನು ಜಿಲ್ಲಾಧ್ಯಕ್ಷ ಹುದ್ದೆಗೆ ಆಯ್ಕೆ ಮಾಡಲಾಗಿದೆ.
ಪದ್ಮರಾಜ್ ಅವರ ನಾಯಕತ್ವ ಹಾಗೂ ಅನುಭವದಿಂದಾಗಿ ಕರಾವಳಿ ಭಾಗದಲ್ಲಿ ಕಾಂಗ್ರೆಸ್ ಪಕ್ಷದ ಸಂಘಟನೆಗೆ ಮತ್ತಷ್ಟು ಹೊಸ ಚೈತನ್ಯ ಮತ್ತು ವೇಗ ಸಿಗಲಿದೆ ಎಂದು ಪಕ್ಷದ ಹಿರಿಯ ಮುಖಂಡರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.