ಜಿಲ್ಲೆ

ಬೆಳಗಾವಿ: ಬೆಳಗಾವಿಯಲ್ಲಿ ಅಗ್ನಿ ಅವಘಡ: ಶಾರ್ಟ್ ಸರ್ಕ್ಯೂಟ್‌ನಿಂದ ಒಂದೇ ಕುಟುಂಬದ ನಾಲ್ವರು ದುರ್ಮರಣ, ಇಬ್ಬರಿಗೆ ಗಂಭೀರ ಗಾಯ



ಬೆಳಗಾವಿ: ಇಲ್ಲಿನ ನಗರ ಪ್ರದೇಶದಲ್ಲಿ ತಡರಾತ್ರಿ ಸಂಭವಿಸಿದ ಭೀಕರ ಅಗ್ನಿ ಅವಘಡಕ್ಕೆ ಒಂದೇ ಕುಟುಂಬದ ನಾಲ್ವರು ಸಜೀವ ದಹನವಾಗಿದ್ದು, ಮತ್ತಿಬ್ಬರು ತೀವ್ರವಾಗಿ ಗಾಯಗೊಂಡಿರುವ ಶೋಚನೀಯ ಘಟನೆ ವರದಿಯಾಗಿದೆ. ಶಾರ್ಟ್ ಸರ್ಕ್ಯೂಟ್‌ನಿಂದ ಉಂಟಾದ ಬೆಂಕಿಯ ಕೆನ್ನಾಲಗೆಗೆ ಇಡೀ ಮನೆ ಭಸ್ಮವಾಗಿದೆ.

​ನಗರದ ಚಾವ್ಹಾಟ್ ಗಲ್ಲಿಯ ನಿವಾಸದಲ್ಲಿ ಈ ದುರಂತ ಸಂಭವಿಸಿದೆ. ತಡರಾತ್ರಿ ದಿಢೀರನೆ ಬೆಂಕಿ ಕಾಣಿಸಿಕೊಂಡಿದ್ದು, ಮನೆಯಲ್ಲಿದ್ದವರು ಹೊರಬರಲಾಗದೆ ಬೆಂಕಿಯ ಜ್ವಾಲೆಗೆ ಸಿಲುಕಿದ್ದಾರೆ. ಪರಿಣಾಮ ನಾಲ್ವರು ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ.

​ಮೃತರ ವಿವರ:

ಘಟನೆಯಲ್ಲಿ ಗಜಾನನ ರಾಜಾರಾಮ ದಮೋನೆ (65), ಶಾರಧಾ ದಮೋನೆ (45), ಭಾರತಿ ರಾಜಾರಾಮ ದಮೋನೆ (50) ಹಾಗೂ ರೋಷನ ಗಜಾನನ ದಮೋನೆ (21) ಮೃತಪಟ್ಟ ದುರ್ದೈವಿಗಳು.

​ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡಿರುವ ಪ್ರಿಯಾ ಗಜಾನನ ದಮೋನೆ (28) ಮತ್ತು ಗಂಗಾ ಗಜಾನನ ದಮೋನೆ (25) ಅವರನ್ನು ತಕ್ಷಣವೇ ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

​ತನಿಖೆ ಪ್ರಗತಿಯಲ್ಲಿ:

ಕೂಲಿ ಕಾರ್ಮಿಕ ಕುಟುಂಬವಾಗಿದ್ದ ದಮೋನೆ ಕುಟುಂಬದ ನಿವಾಸದಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಅಗ್ನಿಶಾಮಕ ದಳ ಹಾಗೂ ಸ್ಥಳೀಯ ಪೊಲೀಸರು ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದರು. ಈ ದುರಂತವು ಮಾರ್ಕೆಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಅಗ್ನಿ ಅವಘಡದ ನಿಖರ ಕಾರಣದ ಕುರಿತು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.



image