ಬೆಳಾಲು: ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯಲ್ಲಿ ಇತ್ತೀಚೆಗೆ 'ಹಿಂದಿ ದಿವಸ್' ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಲೆಯ ಮುಖ್ಯೋಪಾಧ್ಯಾಯರಾದ ಜಯರಾಮ ಮಯ್ಯ ಅವರು, "ನಾವು ನಮ್ಮ ಮಾತೃಭಾಷೆಯನ್ನು ಪ್ರೀತಿಸುವುದರ ಜೊತೆಗೆ ದೇಶದ ಇತರ ಭಾಷೆಗಳನ್ನು ಸಹ ಗೌರವಿಸುವ ಮನೋಭಾವ ಬೆಳೆಸಿಕೊಳ್ಳಬೇಕು" ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ಕಾರ್ಯಕ್ರಮವನ್ನು ಸಂಘಟಿಸಿದ್ದ ಹಿಂದಿ ಶಿಕ್ಷಕಿ ಐಶ್ವರ್ಯ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ದಿನನಿತ್ಯದ ಜೀವನದಲ್ಲಿ ಹಾಗೂ ದೇಶದ ಸಂವಹನದಲ್ಲಿ ಹಿಂದಿ ಭಾಷೆಯ ಮಹತ್ವ ಮತ್ತು ಅದರ ಬಳಕೆಯ ಬಗ್ಗೆ ಬೆಳಕು ಚೆಲ್ಲಿದರು. ಇದೇ ವೇಳೆ ವಿದ್ಯಾರ್ಥಿನಿ ಮುರ್ಷಿದ ಅವರು 'ಹಿಂದಿ ದಿವಸ್' ಆಚರಣೆಯ ಹಿನ್ನೆಲೆ ಮತ್ತು ದಿನದ ವಿಶೇಷತೆಯ ಕುರಿತು ಮಾಹಿತಿ ಹಂಚಿಕೊಂಡರು.
ಸಭಾ ಕಾರ್ಯಕ್ರಮದ ಬಳಿಕ ಶಾಲಾ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಮೂಡಿಬಂದವು.
ಕಾರ್ಯಕ್ರಮದ ಆರಂಭದಲ್ಲಿ ವಿದ್ಯಾರ್ಥಿ ನಿಶಾನ್ ಸ್ವಾಗತ ಕೋರಿದರು. ಶ್ರೇಯ ಮತ್ತು ಸೃಜನ್ಯ ಕಾರ್ಯಕ್ರಮ ನಿರೂಪಿಸಿದರು. ಕೊನೆಯಲ್ಲಿ ಸೃಜನ್ ವಂದನಾರ್ಪಣೆ ಮಾಡಿದರು. ಈ ಸಂದರ್ಭದಲ್ಲಿ ಶಾಲೆಯ ಶಿಕ್ಷಕ ವೃಂದದವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
