ಮಂಗಳೂರು: ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ (ಮೂಡ) ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿರುವ ಸಂತೋಷ್ ಕುಮಾರ್ ಶೆಟ್ಟಿ ಅವರು, ಸುರತ್ಕಲ್ ಮತ್ತು ಚೇಳಾರು ವ್ಯಾಪ್ತಿಯಲ್ಲಿರುವ ಮೂಡ ನಿವೇಶನಗಳಿಗೆ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಸುರತ್ಕಲ್–ಚೇಳಾರು ವ್ಯಾಪ್ತಿಯಲ್ಲಿರುವ ನಿವೇಶನಗಳ ಪ್ರಸ್ತುತ ಸ್ಥಿತಿಗತಿ, ಮೂಲಸೌಕರ್ಯಗಳ ಕೊರತೆ ಹಾಗೂ ಅಭಿವೃದ್ಧಿ ಕಾಮಗಾರಿಗಳ ಕುರಿತು ಮೂಡ ಆಯುಕ್ತರು ಮತ್ತು ಸಂಬಂಧಪಟ್ಟ ಹಿರಿಯ ಅಧಿಕಾರಿಗಳೊಂದಿಗೆ ಅವರು ಸುದೀರ್ಘ ಚರ್ಚೆ ನಡೆಸಿದರು.
ಸಾರ್ವಜನಿಕರಿಗೆ ನಿವೇಶನ ಹಂಚಿಕೆ ಪ್ರಕ್ರಿಯೆಯನ್ನು ವಿಳಂಬವಿಲ್ಲದೆ ತಲುಪಿಸುವುದು ಮತ್ತು ಸಾರ್ವಜನಿಕ ಬಳಕೆಗೆ ಅಗತ್ಯವಾದ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವ ಸಂಬಂಧ ಕೈಗೊಳ್ಳಬೇಕಾದ ಮುಂದಿನ ಕ್ರಮಗಳ ಬಗ್ಗೆ ಅಧಿಕಾರಿಗಳಿಂದ ಸಮಗ್ರ ಮಾಹಿತಿ ಪಡೆದುಕೊಂಡರು. ಸಾರ್ವಜನಿಕರ ಹಿತದೃಷ್ಟಿಯಿಂದ ನಿವೇಶನಗಳ ಅಭಿವೃದ್ಧಿ ಕೆಲಸಗಳನ್ನು ಶೀಘ್ರವಾಗಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಈ ಸಂದರ್ಭದಲ್ಲಿ ಮೂಡ ಆಯುಕ್ತರು ಸೇರಿದಂತೆ ಇಲಾಖೆಯ ಮುಖ್ಯ ಅಧಿಕಾರಿಗಳು ಉಪಸ್ಥಿತರಿದ್ದರು.

